ಬೆಂಗಳೂರು: ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮುಗಿಲುಮುಟ್ಟಿದ್ದು, ಉತ್ಸವದ ಮೊದಲ ದಿನವೇ ಬೆಂಗಳೂರಿನಾದ್ಯಂತ ಬರೋಬ್ಬರಿ 1,84,628 ಗಣಪತಿ ಮೂರ್ತಿಗಳನ್ನು ಭಕ್ತಿಯಿಂದ ವಿಸರ್ಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ವಿಸರ್ಜನೆಗಾಗಿ ಕೈಗೊಂಡಿದ್ದ ಮುನ್ನೆಚ್ಚರಿಕಾ ಕ್ರಮಗಳು ಯಶಸ್ವಿಯಾಗಿವೆ ಎಂದು ಜಿಬಿಎ ತಿಳಿಸಿದೆ.
ಜಿಬಿಎ ಬಿಡುಗಡೆ ಮಾಡಿರುವ ಅಧಿಕೃತ ದತ್ತಾಂಶದ ಪ್ರಕಾರ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 1,20,079 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಇನ್ನು ಸೆಂಟ್ರಲ್ ವಲಯದಲ್ಲಿ 28,860, ಉತ್ತರ ವಲಯದಲ್ಲಿ 16,857, ದಕ್ಷಿಣ ವಲಯದಲ್ಲಿ 10,372 ಹಾಗೂ ಪೂರ್ವ ವಲಯ ಪಾಲಿಕೆ ವ್ಯಾಪ್ತಿಯಲ್ಲಿ 8,460 ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಗಣೇಶ ಮೂರ್ತಿಗಳ ವಿಸರ್ಜನೆ ಸುಗಮವಾಗಿ ನಡೆಯುವಂತೆ ಜಿಬಿಎ ವ್ಯಾಪ್ತಿಯ 42 ಪ್ರಮುಖ ಕೆರೆಗಳ ಆವರಣದಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು. ಇದರ ಜೊತೆಗೆ ಪ್ರತಿಯೊಂದು ವಾರ್ಡ್ ಮಟ್ಟದಲ್ಲೂ 659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿತ್ತು.
ಸಾರ್ವಜನಿಕರು ಹಾಗೂ ಸಾರ್ವಜನಿಕ ಗಣೇಶ ಮಂಡಳಿಗಳ ಅನುಕೂಲಕ್ಕಾಗಿ ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 122 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿತ್ತು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ನೀಡಲು ಈ ಕೇಂದ್ರಗಳ ಮೂಲಕ ಕ್ರಮ ಕೈಗೊಳ್ಳಲಾಗಿತ್ತು.
ಇನ್ನು ವಿಸರ್ಜನಾ ಸ್ಥಳಗಳು ಹಾಗೂ ಸಂಚಾರಿ ಟ್ಯಾಂಕರ್‌ಗಳ ವಿವರಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಜಿಬಿಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲೂ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಿತ್ತು.
ಪರಿಸರ ಸಂರಕ್ಷಣೆಗೆ ಒತ್ತು ನೀಡಿರುವ ಜಿಬಿಎ, ಸಾರ್ವಜನಿಕರಲ್ಲಿ ಮಣ್ಣಿನ ಗಣಪತಿ ಮೂರ್ತಿಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸಿ, ಪರಿಸರ ಸ್ನೇಹಿ ಮೂರ್ತಿಗಳ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ಮಾರಾಟ ನಿಯಂತ್ರಣಕ್ಕೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.
ಕೆರೆಗಳ ನೀರು ಕಲುಷಿತಗೊಳ್ಳದಂತೆ ತಡೆಯಲು ಮೊಬೈಲ್ ಟ್ಯಾಂಕರ್‌ಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಗಣೇಶ ಮೂರ್ತಿಗಳ ವಿಸರ್ಜನೆ ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಜಿಬಿಎ ಹಾಗೂ ಪೊಲೀಸರು ಅಗತ್ಯ ಬಂದೋಬಸ್ತ್ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.



