ಬೆಂಗಳೂರು: ನಗರದ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕೆಟಿಎಂ ಡ್ಯೂಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮೃತರನ್ನು ನಾಗರಬಾವಿ ನಿವಾಸಿಗಳಾದ ಶಬ್ರಾಜ್ (28) ಮತ್ತು ಅವರ ಪತ್ನಿ ಶಬ್ರೀನ್ (24) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಕೆಟಿಎಂ ಬೈಕ್‌ನಲ್ಲಿ ನಾಗರಬಾವಿಯಿಂದ ಯಶವಂತಪುರ ಕಡೆಗೆ ತೆರಳುತ್ತಿದ್ದ ವೇಳೆ ಗೊರಗುಂಟೆಪಾಳ್ಯ ಸಿಗ್ನಲ್ ದಾಟಿದ ನಂತರ ಈ ದುರಂತ ಸಂಭವಿಸಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿದ್ದು, ಸಿಗ್ನಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಮುಂದಕ್ಕೆ ನುಗ್ಗಿದ ಲಾರಿ ಯಶವಂತಪುರ ರಸ್ತೆಯ ಟಿಎಂಟಿ ಜಂಕ್ಷನ್ ಬಳಿ ಬೈಕ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದಿದ್ದು, ಆ ಕ್ಷಣದಲ್ಲೇ ಲಾರಿಯ ಹಿಂಭಾಗದ ಚಕ್ರಗಳು ಅವರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಭೀಕರ ದೃಶ್ಯ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಯಶವಂತಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪೀಕ್ ಅವರ್ ವೇಳೆಯಲ್ಲೇ ನಡೆದ ಈ ಅಪಘಾತದಿಂದ ತುಮಕೂರು ರಸ್ತೆ ಮತ್ತು ಯಶವಂತಪುರ ಮಾರ್ಗದಲ್ಲಿ ಗಂಟೆಗಳ ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕ್ರೇನ್ ಸಹಾಯದಿಂದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃಸ್ಥಾಪಿಸಲಾಗಿದೆ. ಈ ಕುರಿತು ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.



