ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ, ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‌ಟಾಪ್‌ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಎಸ್.ಎಲ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಶನಿವಾರ ಲ್ಯಾಪ್‌ಟಾಪ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ಇಲಾಖೆಯಿಂದ ೧೪೦ ಮಕ್ಕಳಿಗೆ ಲ್ಯಾಪ್ ಟಾಪ್ ಮಂಜೂರಾಗಿದ್ದು, ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ೨೨ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಗಣ್ಯರುಗಳಾದ ಜಿ.ಎಸ್. ಗಡ್ಡದೇವರಮಠ, ಸಿದ್ದು ಪಾಟೀಲ್, ಪ್ರೊ. ಕೆ.ಎಚ್. ಬೇಲೂರ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೆಮನಿ, ಪ್ರಭು ಬುರಬುರೆ, ಕಾರ್ಮಿಕ ಇಲಾಖೆಯ ಅಧಿಕಾರಿ ಬಿ.ಆರ್. ಜಾಧವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಯವರು ಹಾಜರಿದ್ದರು.