ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಮೂವರು ಆರೋಪಿಗಳು ತಮ್ಮ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಬಂಧನ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ, ಮೂವರು ಆರೋಪಿಗಳ ಬಂಧನ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಆದೇಶದ ಮೂಲಕ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ಸಿಗದಂತಾಗಿದೆ. ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಹಿನ್ನೆಲೆಯನ್ನು ನೋಡಿದರೆ, 2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದೊಂದಿಗೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಡಿಆರ್‌ಐ ನಡೆಸಿದ ತನಿಖೆಯಲ್ಲಿ ರನ್ಯಾ ರಾವ್ ಹಾಗೂ ಸಹ-ಆರೋಪಿಗಳು ಒಟ್ಟು 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿತ್ತು.
ಈ ಸಂಬಂಧ ಡಿಆರ್‌ಐ ಸುಮಾರು 250 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 102 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ. ಜಾರಿ ನಿರ್ದೇಶನಾಲಯವು 34 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಪ್ರಕರಣದಲ್ಲಿ ಹೋಟೆಲ್ ಉದ್ಯಮಿ ತರುಣ್ ಕೊಂಡರಾಜು ಹಾಗೂ ಆಭರಣ ವ್ಯಾಪಾರಿಗಳಾದ ಸಾಹಿಲ್ ಮತ್ತು ಭರತ್ ಜೈನ್ ಸಹ-ಆರೋಪಿಗಳಾಗಿದ್ದಾರೆ.



