ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸಲು ಅಧ್ಯಯನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 10 ಕೋಟಿ ರೂ. ಅನುದಾನ ನೀಡುವುದಾಗಿ ಸರ್ಕಾರ ಘೋಷಿಸಿದೆ.
ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯಲ್ಲಿ ಕಾಣಿಸಿಕೊಳ್ಳುತ್ತಿರುವ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ತೊಂದರೆ ಉಂಟುಮಾಡುತ್ತಿರುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳನ್ನು ನಿಯಂತ್ರಿಸಲು ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ. ಇದರ ಮೂಲಕ ರೈತರಿಗೆ ತಾಂತ್ರಿಕ ನೆರವು ಹಾಗೂ ವೈಜ್ಞಾನಿಕ ಮಾರ್ಗದರ್ಶನ ಒದಗಿಸಿ ಬೆಳೆ ಹಾನಿಯನ್ನು ಕಡಿಮೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಸಿಎಂ ತಿಳಿಸಿದ್ದಾರೆ.



