ಚಿತ್ರದುರ್ಗ: ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಚಿತ್ರದುರ್ಗ ತಾಲೂಕಿನ ಪಿಳ್ಳೇಕೇರನಹಳ್ಳಿಯಲ್ಲಿ ನಡೆದಿದೆ.
ಗಣಪತಿಗೆ ಏಕವಚನದಲ್ಲಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯುವಕರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳು ಪರಸ್ಪರ ಕೋಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ.
ಘರ್ಷಣೆಯಲ್ಲಿ ಮನು ಎಂಬ ಯುವಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಗಲಾಟೆ ಬಿಡಿಸಲು ಮುಂದಾದ ಮತ್ತೊಬ್ಬ ಯುವಕನ ಮೇಲೂ ದೊಣ್ಣೆಯಿಂದ ಹಲ್ಲೆ ನಡೆದಿದೆ. ಗಾಯಗೊಂಡಿರುವ ಮನು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘರ್ಷಣೆಯ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೊನ್ನೆ ರಾತ್ರಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಕುರಿತು ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



