ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಈ ಬಾರಿ ಭಕ್ತಸಾಗರವೇ ಹರಿದುಬಂದಿದೆ. ರಾಜ್ಯದ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಿದ್ದು, ಕೇವಲ 12 ದಿನಗಳಲ್ಲಿ ಸುಮಾರು 30 ಲಕ್ಷ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ನಾಳೆ (ಬುಧವಾರ) ಮುಂಜಾನೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಲಿಂಗೇಗೌಡ, ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಅನುಕೂಲಕ್ಕಾಗಿ ದರ್ಶನದ ಸಮಯವನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ದೇವಿಗೆ ನೈವೇದ್ಯ ಸಲ್ಲಿಸುವ ಸಮಯವಾಗಿದ್ದು, ಆ ಬಳಿಕ ಮತ್ತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬುಧವಾರ ಮುಂಜಾನೆ 4 ಗಂಟೆಯವರೆಗೂ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಾಸನ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ದರ್ಶನದ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು. ದೀಪಾವಳಿ ಹಬ್ಬದ ಆಚರಣೆ ಮುಗಿಸಿಕೊಂಡು ದೇವಿಯ ದರ್ಶನ ಪಡೆಯಲು ಸಾಕಷ್ಟು ಭಕ್ತರು ಬಯಸಿದ್ದಾರೆ. ಆದರೆ ದರ್ಶನೋತ್ಸವ ಮುಕ್ತಾಯವಾದರೆ ಮತ್ತೆ ಒಂದು ವರ್ಷ ಕಾಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ದರ್ಶನದ ಸಮಯವನ್ನು ವಿಸ್ತರಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಈ ಬಾರಿಯ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ನಡೆದಿದ್ದು, ಸುಮಾರು 30 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಭಕ್ತರು ಹೆಚ್ಚುವರಿಯಾಗಿ ಆಗಮಿಸಿದ್ದಾರೆ. ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವುದು ಈ ಬಾರಿಯ ದರ್ಶನೋತ್ಸವದ ವಿಶೇಷವಾಗಿದೆ.
ದರ್ಶನೋತ್ಸವದ ವ್ಯವಸ್ಥೆಗಳ ಕುರಿತು ಮಾತನಾಡಿದ ಸಚಿವ ಶಿವಲಿಂಗೇಗೌಡ, ಮುಂದಿನ ವರ್ಷ ಮತ್ತಷ್ಟು ಉತ್ತಮ ರೀತಿಯಲ್ಲಿ ದರ್ಶನೋತ್ಸವ ಆಯೋಜಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ದೇವಾಲಯದ ಆವರಣದಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ವಿಸ್ತರಣೆ ಮಾಡುವ ಅಗತ್ಯವಿದೆ. ಭಕ್ತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ವರ್ಷ ವ್ಯವಸ್ಥೆಗಳನ್ನು ಇನ್ನಷ್ಟು ಸುಧಾರಿಸಲಾಗುವುದು ಎಂದು ಹೇಳಿದ್ದಾರೆ.
ದಿನದ 24 ಗಂಟೆಯೂ ಭಕ್ತರಿಗೆ ದರ್ಶನ ಕಲ್ಪಿಸುವ ಕಾರ್ಯದಲ್ಲಿ ಅರ್ಚಕರು ಸಹಕಾರ ನೀಡಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ವಿರುದ್ಧ ಕೇಳಿಬಂದಿರುವ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ತಾವು ಉತ್ತಮವಾಗಿ ಕೆಲಸ ಮಾಡುವುದನ್ನು ಸಹಿಸದೆ ಕೆಲವರು ಏನೋ ಬಿಡುಗಡೆ ಮಾಡಿದ್ದಾರೆ. ಆ ವಿಚಾರವನ್ನು ಹಾಸನಾಂಬೆ ಪಾದಕ್ಕೆ ಸಮರ್ಪಿಸಿದ್ದೇನೆ. ತಾಯಿಯೇ ಎಲ್ಲವನ್ನೂ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.
ಇನ್ನು ಅಕ್ಟೋಬರ್ 29ರಂದು ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಂದಿನಿಂದ ದೇವಿಯ ದರ್ಶನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕೇವಲ 12 ದಿನಗಳಲ್ಲಿ ಸುಮಾರು 30 ಲಕ್ಷ ಭಕ್ತರು ದರ್ಶನ ಪಡೆದಿರುವುದು ಈ ಬಾರಿಯ ವಿಶೇಷವಾಗಿದೆ.
ಭಕ್ತರ ಸಂಖ್ಯೆಯ ಜೊತೆಗೆ ದೇವಾಲಯದ ಆದಾಯದಲ್ಲಿಯೂ ಗಮನಾರ್ಹ ಏರಿಕೆ ಕಂಡುಬಂದಿದೆ. ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಒಟ್ಟು 24.71 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.










