ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ತಲಾ ₹2,500 ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್, ಸುಮಾರು 40ರಿಂದ 50 ಲಕ್ಷ ರೈತರಿಗೆ ಈ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ₹1,250 ಕೋಟಿ ಬಿಡುಗಡೆ ಮಾಡಲಾಗುವುದು. ಬರಪೀಡಿತ ಪ್ರದೇಶಗಳ ರೈತರಿಗೆ ನೆರವು ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದೇ ವೇಳೆ ರೈತರ ಸಾಲ ಮರುಪಾವತಿ ಅವಧಿಯನ್ನು 36 ತಿಂಗಳಿಂದ 60 ತಿಂಗಳವರೆಗೆ ವಿಸ್ತರಿಸಲಾಗುತ್ತಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ರೈತರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ರೈತರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಈ ಬಾರಿ 49 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ಬೆಳೆ ವಿಮೆ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಬಗ್ಗೆಯೂ ಸರ್ಕಾರ ನಿರ್ಧರಿಸಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.



