ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕರ್ನಾಟಕ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಬರಪೀಡಿತ ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ತಲಾ 2,500 ರೂಪಾಯಿ ಪರಿಹಾರ ನೀಡಲು ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಅನುದಾನ ಬಿಡುಗಡೆಯಾಗುವವರೆಗೆ ಕಾಯದೆ, ರಾಜ್ಯ ಸರ್ಕಾರ ತನ್ನ ನಿಧಿಯಿಂದಲೇ ರೈತರಿಗೆ ಪರಿಹಾರ ನೀಡಲು ಮುಂದಾಗಿದೆ. ವಿಶೇಷವೆಂದರೆ, ಈ ಪರಿಹಾರ ಪಡೆಯಲು ರೈತರು ಯಾವುದೇ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಇತ್ತೀಚೆಗೆ ನಡೆದ ವಿಶೇಷ ಅಧಿವೇಶನದಲ್ಲಿ ಬರದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಮೊದಲ ಹಂತದಲ್ಲಿ ಪ್ರತಿ ರೈತನಿಗೆ 2,500 ರೂಪಾಯಿ ನೀಡುವ ನಿರ್ಧಾರಕ್ಕೆ ರೈತ ಸಂಘಟನೆಗಳು ಹಾಗೂ ಕೆಲವು ರಾಜಕೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಮೊತ್ತ ಸಾಕಾಗುವುದಿಲ್ಲ, ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು. ಈ ವಿರೋಧದ ನಡುವೆಯೇ ಸರ್ಕಾರ ಮೊದಲ ಕಂತಿನ ಪರಿಹಾರ ಬಿಡುಗಡೆಗೆ ಆದೇಶ ಹೊರಡಿಸಿದೆ.
ಕರ್ನಾಟಕದ ಒಟ್ಟು 240 ತಾಲೂಕುಗಳ ಪೈಕಿ 226 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ತಾಲೂಕುಗಳ ಅರ್ಹ ರೈತರಿಗೆ ಪರಿಹಾರ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬರುವವರೆಗೆ ಕಾಯದೆ, ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮೂಲಕ ಮೊದಲ ಕಂತಿನ ಹಣವನ್ನು ನೀಡಲು ನಿರ್ಧರಿಸಲಾಗಿದೆ.
ಬರ ಪರಿಹಾರ ಪಡೆಯಲು ರೈತರು ಯಾವುದೇ ಸರ್ಕಾರಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಇ-ಆಡಳಿತ ಇಲಾಖೆಯ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಮಾಹಿತಿ ಹಾಗೂ ಮುಂಗಾರು ಬೆಳೆ ಸಮೀಕ್ಷೆಯ ದತ್ತಾಂಶವನ್ನು ಆಧರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಈ ಪ್ರಕ್ರಿಯೆಯ ಮೂಲಕ ಪರಿಹಾರಕ್ಕೆ ಅರ್ಹರಾಗಿರುವ ರೈತರನ್ನು ಆಯ್ಕೆ ಮಾಡಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
ರೈತರ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ವ್ಯವಸ್ಥೆಯ ಮೂಲಕ ಪರಿಹಾರ ಜಮೆಯಾಗಲಿದೆ. ಹೀಗಾಗಿ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ.
ಪರಿಹಾರ ವಿತರಣೆಯಲ್ಲಿ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರಿಗೆ ಆದ್ಯತೆ ನೀಡಲಾಗುತ್ತದೆ. ಕಡಿಮೆ ಭೂಹಿಡುವಳಿಯಿಂದ ಹೆಚ್ಚಿನ ಭೂಹಿಡುವಳಿ ಹೊಂದಿರುವ ರೈತರವರೆಗೆ ಆರೋಹಣ ಕ್ರಮದಲ್ಲಿ ಪರಿಹಾರ ಪಾವತಿಸಲಾಗುತ್ತದೆ. ಮೊದಲಿಗೆ ಮಳೆಯಾಶ್ರಿತ ಬೆಳೆಗಳನ್ನು ಬೆಳೆಯುವ ರೈತರಿಗೆ, ನಂತರ ನೀರಾವರಿ ಬೆಳೆಗಾರರಿಗೆ ಹಾಗೂ ಕೊನೆಯ ಹಂತದಲ್ಲಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರಿಗೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ.
ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಒಬ್ಬ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಪರಿಹಾರ ಸೀಮಿತವಾಗಿರಲಿದೆ. ಕೃಷಿಯೇತರ ಉದ್ದೇಶಕ್ಕಾಗಿ ಭೂಪರಿವರ್ತನೆಗೊಂಡಿರುವ ಜಮೀನುಗಳು, ನೀರಾವರಿ ಯೋಜನೆಗಳಿಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಪ್ರದೇಶಗಳು ಹಾಗೂ ಸರ್ಕಾರಿ ಜಮೀನುಗಳಿಗೆ ಈ ಪರಿಹಾರ ಅನ್ವಯವಾಗುವುದಿಲ್ಲ.
ಇನ್ನು, ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಕಾಪಾಡಲು ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ಮೂಲಕ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡುವುದು ಕಡ್ಡಾಯವಾಗಿದೆ. ಪರಿಹಾರ ಪಡೆದ ರೈತರ ವಿವರಗಳು ಹಾಗೂ ಹಣ ಪಾವತಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗಾಗಿ ಸರ್ಕಾರದ ‘ಪರಿಹಾರ’ ತಂತ್ರಾಂಶದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ.
ಮೊದಲ ಕಂತಿನಲ್ಲಿ 2,500 ರೂಪಾಯಿ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಅರ್ಹ ರೈತರಿಗೆ ಬಾಕಿ ಇರುವ ಹೆಚ್ಚುವರಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.









