ಬೆಂಗಳೂರು: ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಹುದ್ದೆಗಳಿಗೆ ನೇರ ನೇಮಕಾತಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿ ಮಾತ್ರ ಐದು ವರ್ಷ ಸಡಿಲಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ವಯೋಮಿತಿ ಆತಂಕದಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ.
ಉದ್ಯೋಗ ನೇಮಕಾತಿಯ ಒಳಮೀಸಲಾತಿ ಪ್ರಮಾಣದ ಕುರಿತು ಪ್ರಕರಣಗಳು ನ್ಯಾಯಾಲಯದಲ್ಲಿ ಇರುವ ಹಿನ್ನೆಲೆ ಅಭ್ಯರ್ಥಿಗಳಿಗೆ ಯಾವುದೇ ನಷ್ಟವಾಗದಂತೆ ವಯೋಮಿತಿಯನ್ನು ಐದು ವರ್ಷ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರಕ್ಕೂ ಉತ್ತೇಜನ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೇಳೆ ಅರಣ್ಯ ಇಲಾಖೆಯ ವಿವಿಧ ವೃಂದಗಳಲ್ಲಿನ 200 ಹುದ್ದೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡಲಾಗುವುದು ಎಂದು ಘೋಷಿಸಲಾಗಿದೆ. ಜೊತೆಗೆ ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.



