ಬೆಂಗಳೂರು:- ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯಾದ್ಯಂತ ಬಾರ್ ಬಂದ್‌ಗೆ ಮದ್ಯ ಮಾರಾಟಗಾರರ ಸಂಘ ನೀಡಿದ್ದ ಕರೆಯನ್ನು ವಾಪಸ್ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ. ಇಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಇನ್ನು ಅವರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್, ನವೆಂಬರ್ 20ರ ಬುಧವಾರದ ಮದ್ಯ ಮಾರಾಟ ಬಂದ್ ಕರೆ ವಾಪಸ್ ಪಡೆದುಕೊಂಡಿದೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದ್ರೆ, ಕರ್ನಾಟಕ ಬಾರ್ ಅಸೋಸಿಯೇಷನ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದು, ಅದು ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್ ವಾಪಸ್ ಪಡೆದುಕೊಂಡಿದೆ.
ಸಿಎಂ ಭೇಟಿ ಬಳಿಕ ಸ್ವತಃ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳು ನಮ್ಮ ಸಂಘದ ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿದ್ದಾರೆ. ಹೀಗಾಗಿ, ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ಗೆ ನೀಡಿದ್ದ ಕರೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಎಂದು ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



