ಬೆಂಗಳೂರು: ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಹತ್ವದ ಸೌಲಭ್ಯ ಒದಗಿಸುವ ಉದ್ದೇಶದಿಂದ ಸರ್ಕಾರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಈ ಯೋಜನೆಗೆ ಇದೀಗ ತಾತ್ವಿಕ ಅನುಮೋದನೆ ನೀಡಲಾಗಿದೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯೂಕೆಆರ್ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಬಸ್ಗಳಲ್ಲಿ ಸಂಚರಿಸುವ ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸಲು ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.
ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅರ್ಹತೆ, ನೋಂದಣಿ ವಿಧಾನ, ಪಾಸ್ ವಿತರಣೆ ಹಾಗೂ ಇತರೆ ನಿಯಮಾವಳಿಗಳ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



