ಬೆಂಗಳೂರು: ರಾಜ್ಯದ ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸಿಹಿಸುದ್ದಿ ನೀಡಲು ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಿರುವ ಸರ್ಕಾರ, ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳ ಹಂಚಿಕೆ ಪ್ರಕ್ರಿಯೆಯನ್ನು ಡಿಸೆಂಬರ್–ಜನವರಿಯಲ್ಲಿ ಆರಂಭಿಸಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 24 ಸಾವಿರ ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ ಜಾಗದಲ್ಲಿ ಬಡಾವಣೆಗಳನ್ನು ನಿರ್ಮಿಸಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಒಂದು ಎಕರೆ ಜಮೀನಿನಲ್ಲಿ ಸುಮಾರು 30ರಿಂದ 40 ನಿವೇಶನಗಳನ್ನು ನಿರ್ಮಿಸಬಹುದು. ಭೂಮಿ ಖರೀದಿ ಸೇರಿದಂತೆ ಪ್ರತಿ ಎಕರೆಗೆ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಾಗುವ ಸಾಧ್ಯತೆಯಿದೆ. ಈ ಮೂಲಕ ಹಂತ ಹಂತವಾಗಿ ನಿವೇಶನ ಹಂಚಿಕೆ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಸುಮಾರು 10 ಲಕ್ಷ ದರ್ಖಾಸ್ತು ಪೋಡಿ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಈಗಿನ ವೇಗದಲ್ಲಿ ಇವುಗಳನ್ನು ಇತ್ಯರ್ಥಪಡಿಸಲು ಸುಮಾರು 30 ವರ್ಷಗಳೇ ಬೇಕಾಗಬಹುದು. ಹೀಗಾಗಿ, ಮುಂದಿನ ಒಂದು ವರ್ಷದೊಳಗೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
136 ಕೋಟಿ ಪುಟಗಳ ಭೂ ದಾಖಲೆ ಡಿಜಿಟಲೀಕರಣ:
ರಾಜ್ಯದಲ್ಲಿ ಒಟ್ಟು 136 ಕೋಟಿ ಪುಟಗಳ ಭೂ ದಾಖಲೆಗಳಿದ್ದು, ಬಹುತೇಕ ದಾಖಲೆಗಳನ್ನು ಈಗಾಗಲೇ ಡಿಜಿಟಲೀಕರಣ ಮಾಡಲಾಗಿದೆ. ಇನ್ನೂ 32 ಕೋಟಿ ಪುಟಗಳ ದಾಖಲೆಗಳ ಡಿಜಿಟಲೀಕರಣ ಬಾಕಿಯಿದ್ದು, ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಭೂ ದಾಖಲೆಗಳಿಗೆ 16ಎ ಏಕೈಕ ದಾಖಲೆ:
ಭೂಮಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ 16ಎ ಎಂಬ ಹೊಸ ಯೋಜನೆ ರೂಪಿಸಿದೆ. ಪಹಣಿ, ಆಕಾರಬಂದ್, ನಕ್ಷೆ, ಕ್ರಾಪ್ ಸರ್ಟಿಫಿಕೇಟ್ ಸೇರಿದಂತೆ ವಿವಿಧ ದಾಖಲೆಗಳನ್ನು ಒಂದೇ ದಾಖಲೆಯಲ್ಲಿ ಒದಗಿಸುವುದು ಇದರ ಉದ್ದೇಶವಾಗಿದೆ.
ದೇಶದಲ್ಲೇ ಮೊದಲ ಬಾರಿಗೆ ಇಂತಹ ಪ್ರಯತ್ನ ಮಾಡಲಾಗುತ್ತಿದ್ದು, ಒಟ್ಟು 2.1 ಕೋಟಿ ದಾಖಲೆಗಳ ಪೈಕಿ ಈಗಾಗಲೇ 9.5 ಲಕ್ಷ 16ಎ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. ಇದಕ್ಕೆ ನಾಮಮಾತ್ರ ಶುಲ್ಕ ನಿಗದಿಪಡಿಸಲಾಗುತ್ತದೆ. ಶೀಘ್ರದಲ್ಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕಂದಾಯ ಪ್ರಕರಣಗಳ ವಿಲೇವಾರಿಗೆ ಗಡುವು:
ಕಂದಾಯ ಇಲಾಖೆಯಲ್ಲಿ ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಯಾವುದೇ ಪ್ರಕರಣ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಬಾಕಿ ಉಳಿಯಬಾರದು ಎಂದು ಸೂಚಿಸಲಾಗಿದೆ.
ಜಿಲ್ಲಾಧಿಕಾರಿಗಳಿಗೆ ಒಂದು ವರ್ಷ, ಉಪವಿಭಾಗಾಧಿಕಾರಿಗಳಿಗೆ ಆರು ತಿಂಗಳು ಹಾಗೂ ತಹಶೀಲ್ದಾರ್ಗಳಿಗೆ 90 ದಿನಗಳ ಕಾಲಮಿತಿ ನಿಗದಿಪಡಿಸಲಾಗಿದೆ. ನಿಗದಿತ ಅವಧಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.









