ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಛಿಸುವವರ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸಹಕಾರ ನೀಡಬೇಕಾಗುತ್ತದೆ. ದೇವನಹಳ್ಳಿ ತಾಲೂಕಿನಲ್ಲಿ 1777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶವಾಗಿದೆ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು ಎಂದು ತಿಳಿಸಿದರು.
ಯಾವುದೋ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆಗಳು ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಚಿವರಾದ ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಹೆಚ್.ಕೆ. ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ ಸೇರಿದಂತೆ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ಧಿಗೆ, ಬೆಳವಣಿಗೆಗೆ ಕೈಗಾರಿಕೆಗೆ ಉತ್ತೇಜನ ನೀಡುವ ಅಗತ್ಯವೂ ಇದೆ.
– ಸಿದ್ದರಾಮಯ್ಯ.
ಮುಖ್ಯಮಂತ್ರಿಗಳು.



