ವಿಜಯಸಾಕ್ಷಿ ಸುದ್ದಿ, ಮೈಸೂರು: ಮೆಕ್ಕೆಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್‌ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್‌ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆಜೋಳ ಉತ್ಪಾದನೆಯಲ್ಲಿ ಏರಿಕೆ ಕಂಡಿದ್ದರೂ ಸಹ ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್‌ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲ್ ಏಜೆನ್ಸಿಗಳಾದ ನಫೆಡ್, ಎನ್‌ಸಿಸಿಎಫ್ ಸಂಸ್ಥೆಗಳು ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.
ಡಿಸ್ಟಿಲರಿಗಳು ಮೆಕ್ಕೆಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾನುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಿಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹಾದೇವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮೆಕ್ಕೆಜೋಳದ ಜೊತೆಗೆ ಹೆಸರುಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್‌ಎಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.


