ಬೆಂಗಳೂರು: ಕೋಟ್ಯಂತರ ರೂ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್ಸಿ ಬಾಲಕೃಷ್ಣ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಒಟ್ಟು 22 ಜನರ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಸರ್ವೇ ನಂಬರ್ 233, 234, 235 ಮತ್ತು 236ರ ಗೋಮಾಳ ಜಮೀನು. ಒಟ್ಟು 165 ಕೋಟಿ ರೂ ಮೌಲ್ಯದ 26 ಎಕರೆ ಗೋಮಾಳ ಜಮೀನು ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಪೈಕಿ 54 ಕೋಟಿ ರೂ ಮೌಲ್ಯದ 8 ಎಕರೆ ಜಮೀನು ಶಾಸಕ ಹೆಚ್ಸಿ ಬಾಲಕೃಷ್ಣ ತಮ್ಮ ಪತ್ನಿ ರಾಧಾ ಬಾಲಕೃಷ್ಣ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಎನ್.ಆರ್ ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಮೂರನೇ ವ್ಯಕ್ತಿಗೆ ಮಂಜೂರು ಮಾಡಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. 2025ರ ಏಪ್ರಿಲ್ 3ರಂದು ಕೆಂಗೇರಿ ಉಪ ನೋಂದಣಿ ಅಧಿಕಾರಿ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.