ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಇಂದಿನಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ಕೊಟ್ಟಿದ್ದಾರೆ.
ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ ಜೊತೆ ಸೋಮವಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಎಲ್ಲಾ ಬೆಳವಣಿಗೆಯ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಇಂದಿನಿಂದ ಬೆಳಗ್ಗೆಯಿಂದಲೇ ಮುಷ್ಕರಕ್ಕಿಳಿದಿದ್ದಾರೆ. ಇದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್‌ಗಳ ಸಂಚಾರ ಸ್ತಬ್ಧಗೊಂಡಿವೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂಗೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಗೆ ಧುಮುಕಿದ್ದಾರೆ. ಆದ್ರೆ ಕೆಲವೆಡೆ ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಿಲ್ಲ, ಏಕೆಂದರೆ ತುರ್ತು ಕಾರ್ಯಗಳಿಗೆ ಪ್ರಯಾಣಿಕರು ಖಾಸಗಿ ಬಸ್, ಟ್ರಾವೆಲ್ಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.
ಬೆಂಗಳೂರಿನಲ್ಲಿ ಹೇಗಿದೆ ಪರಿಸ್ಥಿತಿ?
ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ಗಳು ಸಂಚರಿಸುತ್ತಿವೆ. ಏರ್ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ಕೊಪ್ಪಳಕ್ಕೂ ತಟ್ಟಿದ ಬಿಸಿ:
ಕೊಪ್ಪಳ : ರಾಜ್ಯ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಜಿಲ್ಲಾ ಕೇಂದ್ರ ಕೊಪ್ಪಳದಿಂದ ಯಾವುದೇ ಬಸ್‌ಗಳು ಸಂಚಾರವಾಗುತ್ತಿಲ್ಲ.
ಖಾಸಗಿ ಬಸ್ ಗಳನ್ನು ತರಿಸಿ, ಜನರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕೆಕೆಆರ್‌ಟಿಸಿ ಅಧಿಕಾರಿಗಳು ಹೇಳುತ್ತಿದ್ದಾರೆ.
ಬಾಗಲಕೋಟೆಯಲ್ಲಿ ಹಲವೆಡೆ ಖಾಸಗಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ
ಬಾಗಲಕೋಟೆ : ರಾಜ್ಯ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು,ವಾಕರಸಾ ಸಂಸ್ಥೆಯಿಂದ ಖಾಸಗಿ ಮ್ಯಾಕ್ಸಿ ಕ್ಯಾಬ್, ಜೀಪ್ ಗಳನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಬಾಗಲಕೋಟೆ ಯಿಂದ ಹಲವೆಡೆ ಖಾಸಗಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಓಡಾಟ:
ಬಸ್ ಕಾರ್ಮಿಕರು ಮುಷ್ಕರ ಹೂಡಿದ್ದರೂ, ಬಿಎಂಟಿಸಿಯ ಇವಿ ಬಸ್‌ಗಳಲ್ಲಿ ಖಾಸಗಿ ನೌಕರರು ಇರುವ ಕಾರಣ ಈ ಬಸ್ ಗಳು ಮಾತ್ರ ಇಂದು ಓಡಾಟ ನಡೆಸಲಿದೆ. ಕೆಎಸ್‌ಆರ್‌ಟಿಸಿ ಯಲ್ಲಿ 50 ಇವಿ ಬಸ್‌ಗಳಿವೆ ಇವುಗಳಲ್ಲಿ ಇರುವುದು ಖಾಸಗಿ ಚಾಲಕರು ಹಾಗೂ, ಬಿಎಂಟಿಸಿಯಲ್ಲಿ 1492 ಎಲೆಕ್ಟ್ರಿಕ್ ಬಸ್‌ಗಳಿವೆ, ಇವುಗಳನ್ನು ಓಡಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಶಾಲೆ ಕಾಲೇಜಿಗೆ ರಜೆ ಇಲ್ಲ: ಪರೀಕ್ಷೆ ಸಂದರ್ಭ ಬಸ್ ಇಲ್ಲದೆ ಕಾಲೇಜು ವಿದ್ಯಾರ್ಥಿನಿಯರ ಪರದಾಟ!
ಬೆಳಗಾವಿಯಲ್ಲಿ ಹಿರೇಬಾಗೇವಾಡಿಯಿಂದ ಬಂದ ವಿದ್ಯಾರ್ಥಿನಿಯರಿಗೆ ಬಸ್ ಇಲ್ಲದೆ ಅತ್ತ ಕಾಲೇಜ್‌ಗೂ ಹೋಗಲು ಆಗದೆ, ಮನೆಗೂ ವಾಪಸ್ ಹೋಗಲಾಗದೆ ವಿದ್ಯಾರ್ಥಿನಿಯರು ಪರದಾಡಿದ ದೃಶ್ಯ ಸಾಮಾನ್ಯವಾಗಿತ್ತು. ವಿದ್ಯಾರ್ಥಿಗಳು ಓಡಾಟಕ್ಕೆ ಬಸ್ ನಂಬಿಕೊಂಡಿದ್ದವರಿಗೆ ಇಂದು ತೀವ್ರ ಸಮಸ್ಯೆ ಉಂಟಾಗಲಿದೆ. ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಕೂಡಾ ಮಾಡಿಲ್ಲ.
ಗದಗ:-
ಗದಗ ಬಸ್ ನಿಲ್ದಾಣಗಳು ಕೂಡ ಬಿಕೋ ಎನ್ನುತ್ತಿವೆ. ಬಸ್ ಗಳಿಲ್ಲದೇ ಪ್ರಯಾಣಿಕರು ಕಂಗಾಲಾಗಿದ್ದಾರೆ.
ಒಟ್ಟಾರೆ ಹಿಂಬಾಕಿ ವೇತನ ಪವತಿ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಯನ್ನು ಮುಂದಿಟ್ಟು ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಸುಮಾರು ಒಂದುವರೆ ಲಕ್ಷ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.