ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ 7 ಸಾವಿರ 721 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.
ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಿರ್ದೇಶನ ನೀಡಲಾಗಿದೆ.
ಇದೇ ವೇಳೆ, ನಾಫೆಡ್ ಮತ್ತು ಎನ್ಸಿಸಿಎಫ್ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳಾಗಿ ನೇಮಕ ಮಾಡಲಾಗಿದ್ದು, ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯಾಗಿ ಜವಾಬ್ದಾರಿ ನೀಡಲಾಗಿದೆ.
ರೈತರ ನೋಂದಣಿ ಅವಧಿಯನ್ನು 50 ದಿನಗಳ ಕಾಲ ಹಾಗೂ ಖರೀದಿ ಅವಧಿಯನ್ನು 60 ದಿನಗಳ ಕಾಲ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯ ಜೊತೆಯಲ್ಲೇ ಖರೀದಿ ಕಾರ್ಯವೂ ಆರಂಭವಾಗಬೇಕು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಹಾಗೂ ವೈಜ್ಞಾನಿಕ ಸೌಲಭ್ಯ ಹೊಂದಿರುವ ಗೋದಾಮುಗಳಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸರ್ಕಾರ ಸೂಚಿಸಿದೆ.
ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.



