ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.
ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನವನ್ನು ಶೇಕಡಾ 12.5ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ವೇತನ ಹೆಚ್ಚಳದ ಲಾಭ ದೊರೆಯಲಿದೆ.
ಜುಲೈ ತಿಂಗಳ ವೇತನದಲ್ಲೇ ಪರಿಷ್ಕೃತ ವೇತನ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೌಕರರಿಗೆ ಬಾಕಿ ಉಳಿದಿರುವ ವೇತನದ ಮೊದಲ ಕಂತಿನ ಹಣವನ್ನೂ ಸರ್ಕಾರ ಬಿಡುಗಡೆ ಮಾಡಿದೆ.
ಈ ವೇತನ ಹೆಚ್ಚಳದಿಂದ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ಸುಮಾರು 72.80 ಕೋಟಿ ರೂಪಾಯಿ ವೆಚ್ಚವಾಗಲಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು, ಈ ತಿಂಗಳಿನಿಂದಲೇ ಪರಿಷ್ಕೃತ ವೇತನ ನೌಕರರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.



