ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಸರ್ಕಾರ ಹೊಸ ತಂತ್ರ ರೂಪಿಸಿದೆ.
ಮದ್ಯದ ಮೇಲೆ ವಿಧಿಸುವ ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ.
ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಹೆಚ್ಚಿಸುವ ಬದಲು ಹಂತ ಹಂತವಾಗಿ ಏರಿಕೆ ಮಾಡುವ ಯೋಜನೆಯನ್ನು ಸರ್ಕಾರ ರೂಪಿಸಿದೆ.
ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿದ್ದು, ಇದು 12.7 ಶೇಕಡಾ ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ 2026-27ನೇ ಸಾಲಿಗೆ ಸುಮಾರು 45,000 ಕೋಟಿ ರೂ. ರಾಜಸ್ವ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.



