ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಇಂದು ಅದ್ದೂರಿ ಚಾಲನೆ ದೊರೆತಿದೆ.

ದೀಪಾವಳಿ ಹಬ್ಬದ ಅಂಗವಾಗಿ ನಡೆಯುತ್ತಿರುವ ಈ ಉತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಜಾತ್ರೆಯ ಮೊದಲ ದಿನ ನೂರೊಂದು ಚಿಕ್ಕ ಮಕ್ಕಳು ಸಾಂಪ್ರದಾಯಿಕವಾಗಿ ಹಾಲರವಿ ತರುವ ಮೂಲಕ ನೂರೊಂದು ಹಾಲರವಿ ಉತ್ಸವ ನೆರವೇರಿಸಿದರು. ಇದರೊಂದಿಗೆ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಆರಂಭವಾಗಿದೆ.
ಇನ್ನು ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರ ಗ್ರಾಮದಲ್ಲಿರುವ ಐತಿಹಾಸಿಕ ವೆಂಕಟರಮಣಸ್ವಾಮಿ ದೇವಸ್ಥಾನದ ಕಲ್ಯಾಣಿಯಲ್ಲೂ ಲಕ್ಷ ದೀಪೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಸಾವಿರಾರು ದೀಪಗಳಿಂದ ಕಲ್ಯಾಣಿ ಕಂಗೊಳಿಸಿದ್ದು, ನೋಡುಗರ ಕಣ್ಮನ ಸೆಳೆಯಿತು.
ಬೆಳಗ್ಗೆಯಿಂದಲೇ ದೇವಸ್ಥಾನವನ್ನು ವಿವಿಧ ಬಗೆಯ ಹೂವುಗಳು ಹಾಗೂ ತೋರಣಗಳಿಂದ ಅಲಂಕರಿಸಲಾಗಿತ್ತು. ಐದು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆಯಲಿವೆ.









