ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬೆಟಗೇರಿ ರಾಜ್ಯೋತ್ಸವ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆ ಹಾಗೂ ಸಾರ್ವಜನಿಕರ ಆಶ್ರಯದಲ್ಲಿ ಕಳೆದ 28 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತ ಬಂದಿದ್ದು, ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ 1ರಂದು ಅದ್ಧೂರಿಯಾಗಿ ಆಚರಿಸಲಾಗುವುದು.
ಬೆಟಗೇರಿ ಶಾಲಾ-ಕಾಲೇಜುಗಳ ಆಕರ್ಷಕ ರೂಪಕಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಬೆಟಗೇರಿಯ ಎಲ್ಲ ವಿದ್ಯಾರ್ಥಿಗಳು, ಶಾಲಾ-ಕಾಲೇಜು ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ.
ಅಂದು ಮುಂಜಾನೆ 8.30 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬೆಟಗೇರಿಯ ಎಲ್ಲ ನಗರಸಭಾ ಸದಸ್ಯರು, ಡಿ.ಡಿ.ಪಿಐ, ಗದಗ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ವಿನಂತಿಸಿದ್ದಾರೆ.



