ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ನಡೆಸುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಜೂನ್ 30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳಿಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದೆ.
ಜಿಬಿಎ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಈ ವೇಳೆ ಸರ್ಕಾರದ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಮೀಸಲಾತಿ ಪ್ರಕ್ರಿಯೆಯ ಅಂತಿಮ ಹಂತ ನಡೆಯುತ್ತಿದ್ದು, ಅದು ಫೆಬ್ರವರಿ 28ರವರೆಗೆ ಮುಂದುವರಿಯಲಿದೆ. ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ ಎಂದು ಕೋರ್ಟ್‌ಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರೊಳಗೆ ಮತದಾರರ ಪಟ್ಟಿಯ ಪರಿಶೀಲನೆ ಮುಕ್ತಾಯಗೊಳ್ಳಲಿದೆ. ನಂತರ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿರುವುದರಿಂದ, ಮೇ ಅಂತ್ಯದವರೆಗೂ ಸಮಯ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಆಯೋಗ, ಜೂನ್ ವರೆಗೆ ಸಮಯ ಬೇಕಾಗಬಹುದು ಎಂದು ತಿಳಿಸಿತು.
ಎಲ್ಲ ವಾದಗಳನ್ನು ಆಲಿಸಿದ ಬಳಿಕ, ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶ ನೀಡಿತು. ಜೊತೆಗೆ, ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮತ್ತೆ ಸಮಯ ಕೇಳಬಾರದು ಎಂದು ಕಠಿಣ ಎಚ್ಚರಿಕೆಯನ್ನೂ ನೀಡಿದೆ.



