ನವದೆಹಲಿ:- ಒಂದು ರಾಷ್ಟ್ರ, ಒಂದು ಚುನಾವಣೆ” ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ಅನುಸರಿಸಿ ಸಮಗ್ರ ಮಸೂದೆಯು ರಾಷ್ಟ್ರದಾದ್ಯಂತ ಏಕೀಕೃತ ಚುನಾವಣೆಗಳಿಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.
ಇನ್ನೂ ಈ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಒನ್ ನೇಷನ್ ಒನ್ ಎಲೆಕ್ಷನ್ ಮಾದರಿಯು ಲೋಕಸಭೆ ಮತ್ತು ರಾಜ್ಯ ಅಸೆಂಬ್ಲಿಗಳಿಗೆ ರಾಷ್ಟ್ರವ್ಯಾಪಿ ಏಕಕಾಲಿಕ ಚುನಾವಣೆಗಳನ್ನು ಗುರಿಯಾಗಿಸಿಕೊಂಡಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.
ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ ಚುನಾವಣೆ ನಡೆಸಬೇಕು ಎಂದು ಅದು ಹೇಳಿದೆ. ʼಒಂದು ರಾಷ್ಟ್ರ, ಒಂದು ಚುನಾವಣೆʼ ಪ್ರಸ್ತಾಪದ ಅನುಷ್ಠಾನಕ್ಕೆ ಸಂವಿಧಾನಕ್ಕೆ ಕನಿಷ್ಠ 18 ತಿದ್ದುಪಡಿಗಳನ್ನು ತರಬೇಕಿದೆ ಎಂದು ಹೇಳಲಾಗಿದೆ.