ಗದಗ:- 2023ರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿಗಳ ಆಶ್ವಾಸನೆ ನೀಡಿ ಅಧಿಕಾರದ ಗದ್ದುಗೆ ಏರಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಅಂದ್ರೆ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ಕೊಡುವುದು ಈ ಯೋಜನೆಯ ಉದ್ದೇಶವಾಗಿದೆ.
ಆದರೆ ಇದೀಗ ಗದಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭರವಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಫಲಾನುಭವಿಗಳು, ಸಿಎಂ ಸಿದ್ಧರಾಮಯ್ಯನವರು ಪದೇ ಪದೇ, ‘‘ನಮ್ಮದು ನುಡಿದಂತೆ ನಡೆದ ಸರ್ಕಾರ’’ ಎನ್ನುತ್ತಾರೆ. ಆದರೆ, ಚುನಾವಣೆ ಸಂದರ್ಭ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಮೂರು ತಿಂಗಳಾದರೂ ಹಣ ಬಂದಿಲ್ಲ. ಎಲ್ಲಿದೆ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶ್ನೆ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ನೀಡಿ ಎಂದು ಯಾರೂ ಕೇಳಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಮಹಿಳೆಯರು ಕಿಡಿಕಾರಿದ್ದಾರೆ. ಸರ್ಕಾರದ ಹಣದ ಮೇಲೆ ಅವಲಂಬಿತರಾಗಿದ್ದೆವು. ಈಗ ಹಣ ಕೊಡದೇ ಇರುವುದರಿಂದ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣಕ್ಕೂ ಹೊಡೆತ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.