ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮುನ್ನ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯ. ಗ್ಯಾರಂಟಿ ಯೋಜನೆಗಳ ಜೊತೆಗೆ ಜನರಿಗೆ ಹೊಸ ಹೊಸ ಯೋಜನೆಗಳನ್ನು ತಲುಪಿಸುವ ಕೆಲಸವೂ ನಡೆಯುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರ ಸಿಕ್ಕಿಹಾಕಿಕೊಂಡಿದೆ ಎಂಬ ಸಚಿವ ಹೆಚ್.ಸಿ. ಬಾಲಕೃಷ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿಗಳಿಗೆ ಹೆಚ್ಚಿನ ಹಣ ಬೇಕಾಗುತ್ತಿರುವುದು ನಿಜವಾದರೂ, ಅವುಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ವಿಪಕ್ಷಗಳ ಆರೋಪವನ್ನೂ ಅವರು ತಳ್ಳಿಹಾಕಿದರು. ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಿಲ್ಲ. ಬೊಕ್ಕಸ ಖಾಲಿಯಾಗಿದ್ದರೆ ಕರಾವಳಿ ಅಭಿವೃದ್ಧಿಗೆ 35 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲು ಹೇಗೆ ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದರು.

