ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿ-ಬಾಲೆಹೊಸೂರ ಸಂಪರ್ಕಿಸುವ ಪಿಡಬ್ಲ್ಯೂಡಿ ಜಿಲ್ಲಾ ಮುಖ್ಯ ರಸ್ತೆ ಕಳೆದ ಎರಡು ದಶಕಗಳಿಂದ ಅಭಿವೃದ್ಧಿ ಕಾಣದೇ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ರಸ್ತೆ ದುಸ್ಥಿತಿಯಿಂದ ಬೇಸತ್ತ ಜನರು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮೇಶ್ವರದಿಂದ ಬಾಲೆಹೊಸೂರ ಮಾರ್ಗವಾಗಿ ಗುತ್ತಲ ಹಾಗೂ ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಡಾಂಬರ್‌ನ ಗುರುತುಗಳೇ ಕಾಣದಂತಾಗಿದೆ. ಮೊಣಕಾಲು ಆಳದ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ನಿತ್ಯ ಎದ್ದು-ಬಿದ್ದು ಸಾಗುವ ದುಸ್ಥಿತಿ ನಿರ್ಮಾಣವಾಗಿದೆ.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗುತ್ತಿದ್ದು, ವಾಹನಗಳು ಪಂಕ್ಚರ್ ಆಗುವುದು, ಜಾರಿ ಬಿದ್ದು ಆಸ್ಪತ್ರೆಗೆ ಸೇರುವುದು ಸಾಮಾನ್ಯ ಸಂಗತಿಯಾಗಿ ಬಿಟ್ಟಿದೆ. ಕೆಎಸ್‌ಆರ್‌ಟಿಸಿ ಚಾಲಕರು ಸಹ ಈ ಮಾರ್ಗದಲ್ಲಿ ಬಸ್ ಓಡಿಸಲು ಹಿಂದೇಟು ಹಾಕುತ್ತಿರುವುದರಿಂದ ಕೆಲ ದಿನ ಬಸ್ ಸಂಚಾರವೇ ಸ್ಥಗಿತಗೊಳ್ಳುವ ಪರಿಸ್ಥಿತಿ ಉಂಟಾಗಿದೆ.
ಈ ಭಾಗದಲ್ಲಿರುವ ಬಾಲೆಹೊಸೂರ ಮಠ, ಪ್ರಸಿದ್ಧ ಆಂಜನೇಯ ದೇವಸ್ಥಾನ, ಸರ್ಕಾರಿ ಆಸ್ಪತ್ರೆ, ಶಾಲೆ, ಬ್ಯಾಂಕ್ ಸೇರಿದಂತೆ ವಿವಿಧ ಸೇವೆಗಳಿಗೆ ಆಗಮಿಸುವ ಜನರು ರಸ್ತೆ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.
7 ಕೋಟಿ ಮಂಜೂರು… ಟೆಂಡರ್ ಪೂರ್ಣ… ಕಾಮಗಾರಿ ಮಾತ್ರ ಶೂನ್ಯ!
ಗ್ರಾಮಸ್ಥರ ಹೋರಾಟ ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಒಂದೂವರೆ ವರ್ಷದ ಹಿಂದೆಯೇ ರಸ್ತೆ ಅಭಿವೃದ್ಧಿಗೆ 7 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ರಾಜಕೀಯ ವೈಮನಸ್ಸು, ವೈಯಕ್ತಿಕ ಪ್ರತಿಷ್ಠೆ ಹಾಗೂ ಪ್ರಭಾವಿಗಳ ಒತ್ತಡದಿಂದ ಗುತ್ತಿಗೆದಾರ ಹಿಂದೆ ಸರಿದಿದ್ದಾನೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಬಳಿಕ ಮರು ಟೆಂಡರ್ ಪ್ರಕ್ರಿಯೆ ನಡೆದರೂ ಕಾಮಗಾರಿ ಆರಂಭದ ಸ್ಥಳ ಬದಲಾವಣೆ ಸೇರಿದಂತೆ ಹಲವು ತಾಂತ್ರಿಕ ಕಾರಣಗಳಿಂದ ವಿಳಂಬ ಮುಂದುವರಿದಿದೆ.
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಸಮಸ್ಯೆ ಮತ್ತಷ್ಟು ಗಂಭೀರವಾಗಿದ್ದು, ಜನರ ನಿರೀಕ್ಷೆಯಂತೆ ಕಾಮಗಾರಿ ಆರಂಭವಾಗುತ್ತದೆಯೇ ಎಂಬ ಪ್ರಶ್ನೆ ಈಗ ಗ್ರಾಮೀಣ ಭಾಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.



