ಹಾಸನ: ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ನಲ್ಲಿ ನಡೆದಿದೆ.
ಶನಿವಾರ ರಾತ್ರಿ ಸಂಭವಿಸಿದ ಈ ಅಪಘಾತದ ವೇಳೆ ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಗಾಯಗೊಂಡವರ ಪೈಕಿ 13 ಮಂದಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಗಾಯಾಳುಗಳನ್ನು ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು–ಹಾಸನ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



