ಹಾಸನ: ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಅರಸೀಕೆರೆ ತಾಲ್ಲೂಕಿನ ಚಿಕ್ಕಾರಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ–69ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಬ್ಬೀರ್ (55), ತಿಮ್ಮಣ್ಣ (53) ಹಾಗೂ ಸಂಜಯ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ಪ್ರಕಾರ, ಅಡಕೆ ತುಂಬಿಕೊಂಡು ಸಾಗುತ್ತಿದ್ದ ಪಿಕಪ್ ವಾಹನದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದೇ ವೇಳೆ ಹಾಸನ ಮೂಲದ ನೌಶದ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಕಡೂರು ತಾಲ್ಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ತಿಮ್ಮಣ್ಣ ಹಾಗೂ ಸಂಜಯ್ ಅವರ ಮೃತದೇಹಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂತನ ಎಸ್ಪಿ ಶುಭಾನ್ವಿತಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



