ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಇಂದು ತೆರೆ ಬೀಳಲಿದೆ.

ಮಧ್ಯಾಹ್ನ 12.30ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ದರ್ಶನೋತ್ಸವದ ಕೊನೆಯ ದಿನವಾಗಿರುವುದರಿಂದ ದೇವಿಯ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ದೇವಾಲಯದ ಬಾಗಿಲು ತೆರೆದ ದಿನದಿಂದ ನವೆಂಬರ್ 10ರ ಮಧ್ಯರಾತ್ರಿವರೆಗೆ 31 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಡ್ಡು ಪ್ರಸಾದ ಮಾರಾಟದಿಂದ ಒಟ್ಟು ₹25.36 ಕೋಟಿ ಆದಾಯ ಸಂಗ್ರಹವಾಗಿದೆ.
ಇಂದು ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. ಅರ್ಚಕರು ದೇವಿಗೆ ನೈವೇದ್ಯ ಅರ್ಪಿಸಿ, ಅಲಂಕಾರ ವಿಸರ್ಜನೆ ಪೂಜೆ ನೆರವೇರಿಸಲಿದ್ದಾರೆ. ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ಪೂಜೆಯ ಬಳಿಕ ಭಕ್ತರಿಗೆ ದೇವಿಯ ವಿಶ್ವರೂಪ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆ ಸಮಯದಲ್ಲಿ ಸ್ಥಳದಲ್ಲಿರುವ ಗಣ್ಯರು ಹಾಗೂ ಭಕ್ತರು ದೇವಿಯ ದರ್ಶನ ಪಡೆಯಬಹುದು.
ವಿಶ್ವರೂಪ ದರ್ಶನ ಪೂರ್ಣಗೊಂಡ ಬಳಿಕ ದೇವಾಲಯದ ಸಿಬ್ಬಂದಿ ಗರ್ಭಗುಡಿಯ ಬಾಗಿಲನ್ನು ಮುಚ್ಚಿ ಸೀಲ್ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಪ್ರಕ್ರಿಯೆ ನಡೆಯಲಿದೆ. ಇದರೊಂದಿಗೆ ಈ ವರ್ಷದ ಹಾಸನಾಂಬೆ ದರ್ಶನೋತ್ಸವ ಅಂತ್ಯಗೊಳ್ಳಲಿದೆ. ಮುಂದಿನ ವರ್ಷ ಆಶ್ವಯುಜ ಮಾಸದಲ್ಲಿ ಮತ್ತೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.










