ಬೆಂಗಳೂರು: ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,
ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು. ಕಾಂಗ್ರೆಸ್ ಸರ್ಕಾರದಲ್ಲೂ 40% ಕಮೀಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರ ಆರೋಪ.
ಕಮೀಷನ್ ವ್ಯವಹಾರ ಇಲ್ಲ ಎಂದಾದರೆ, ಯಾಕಪ್ಪಾ ಹಾಗೆ ಹೇಳಿದಿರಿ? ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರ್ಕಾರದ ಮೇಲೆ 40% ಕಮೀಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ?
ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಷನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಷನ್. ಮುಖ್ಯಮಂತ್ರಿ ಹಿಟ್ ಅಂಡ್ ರನ್. ಎಂದು ವಾಗ್ದಾಳಿ ಮಾಡಿದ್ದಾರೆ.