ಹಾವೇರಿ: ಮಳೆ ಕೊರತೆಯಿಂದ ಕಂಗಾಲಾಗಿರುವ ಹಾವೇರಿ ಜಿಲ್ಲೆಯ ರೈತರು, ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ 20ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
ಹಾವೇರಿ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಪ್ರಸಕ್ತ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಜೀವನಾಡಿ ನದಿಗಳಾದ ವರದಾ ಹಾಗೂ ತುಂಗಭದ್ರಾ ನದಿಗಳಲ್ಲೂ ನೀರಿನ ಪ್ರಮಾಣ ಇಳಿಕೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಶೇ.50ರಷ್ಟು ಕಡಿಮೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.
ಉತ್ತರ ಕನ್ನಡ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗಿದ್ದರೂ, ಇದೀಗ ವರದಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾಡಳಿತ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಗೇಟ್‌ಗಳನ್ನು ಅಳವಡಿಸಿ ಲಭ್ಯವಿರುವ ನೀರನ್ನು ಸಂಗ್ರಹಿಸಬೇಕು. ಜೊತೆಗೆ ಸುತ್ತಮುತ್ತಲಿನ ಕೆರೆಗಳನ್ನು ತುಂಬಿಸುವ ಕೆಲಸಕ್ಕೂ ಆದ್ಯತೆ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಮಳೆ ಕೊರತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಚಿವರು ಅಧಿಕಾರಿಗಳೊಂದಿಗೆ ಎರಡು-ಮೂರು ಬಾರಿ ಸಭೆ ನಡೆಸಿದ್ದರೂ, ಕೆರೆಗಳನ್ನು ತುಂಬಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ವರದಾ ನದಿಯಲ್ಲಿರುವ ನೀರನ್ನು ಬ್ಯಾರೇಜ್‌ಗಳಲ್ಲಿ ಸಂಗ್ರಹಿಸುವುದರಿಂದ ಚಳಿಗಾಲ ಹಾಗೂ ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದರ ಜೊತೆಗೆ ಹಿಂಗಾರು ಬೆಳೆ ಬೆಳೆಯುವ ರೈತರಿಗೂ ಅನುಕೂಲವಾಗಲಿದೆ. ಈ ವಿಚಾರದಲ್ಲಿ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ರೈತರು ಆಗ್ರಹಿಸಿದ್ದಾರೆ.
ಮಳೆರಾಯನ ಅವಕೃಪೆಯಿಂದ ಬೆಳೆಗಳಿಗೆ ಸೂಕ್ತ ಫಸಲು ಸಿಗದೆ ಸಂಕಷ್ಟದಲ್ಲಿರುವ ರೈತರಿಗೆ, ಇದೀಗ ವರದಾ ನದಿಯ ನೀರೇ ಆಶ್ರಯವಾಗಿದೆ. ಹೀಗಾಗಿ ಲಭ್ಯವಿರುವ ನೀರನ್ನು ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕಿದೆ.



