ಚಿಕ್ಕಬಳ್ಳಾಪುರ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸಮೀಪ ಎರಡು ದಿನಗಳ ಹಿಂದೆ ಈ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 25 ವರ್ಷದ ನಿತಿನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾನೆ. ನಿತಿನ್ ಚಿಕ್ಕಬಳ್ಳಾಪುರ ನಗರದ ನಿವಾಸಿಯಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.
ಯುಗಾದಿ ಹಬ್ಬದ ಸಂದರ್ಭದಲ್ಲಿ ಸ್ನೇಹಿತನೊಂದಿಗೆ ಊಟಕ್ಕೆ ತೆರಳಿದ್ದ ನಿತಿನ್, ಬಳಿಕ ವಾಪಸ್ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಮುದ್ದೇನಹಳ್ಳಿ ಬಳಿಯ ವಿಟಿಯು ಕಾಲೇಜು ಸಮೀಪ ಅಪಘಾತ ಸಂಭವಿಸಿದೆ. ನಿತಿನ್ ಹಾಗೂ ಅವನ ಸ್ನೇಹಿತ ಬಜಾಜ್ ಚೇತಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ಬಂದ ಟಿವಿಎಸ್ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಯಿಂದ ನಿತಿನ್ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಜೊತೆಯಲ್ಲಿದ್ದ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ.
ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



