ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಶಿಕ್ಷಕರು, ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಹಾಗೂ ಇತರರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ಉಲ್ಲೇಖಿಸಿರುವಂತೆ, ಕಳೆದ 10 ತಿಂಗಳಿನಿಂದ ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಯಪ್ಪ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಜಾತಿ ನಿಂದನೆ ಮಾಡಲಾಗುತ್ತಿತ್ತು ಎಂದು ಜಯಪ್ಪ ಹಲವು ಬಾರಿ ತಮ್ಮ ಪತ್ನಿಗೆ ತಿಳಿಸಿದ್ದರೆಂದು ಆರೋಪಿಸಲಾಗಿದೆ.
ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯ ಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ ಜಯಪ್ಪ ವಿಷ ಸೇವಿಸಿದ್ದರು ಎನ್ನಲಾಗಿದೆ.
ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



