ಬೆಂಗಳೂರು: ಶಿಕ್ಷಕರ ಕೊರತೆ ನಿವಾರಣೆಗೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಮುಂದಾಗಿದ್ದ ಶಿಕ್ಷಣ ಇಲಾಖೆ ಬಳಿಕ ಇದೀಗ ಆರೋಗ್ಯ ಇಲಾಖೆ ಕೂಡ ವೈದ್ಯರ ವಿಲೀನ ಪ್ರಕ್ರಿಯೆಗೆ ಕೈ ಹಾಕಿದೆ. ರಾಜ್ಯದ ಸುಮಾರು 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದ್ದು, ಇದರಿಂದ ಗ್ರಾಮೀಣ ಜನರಿಗೆ ದೊಡ್ಡ ಆಘಾತ ಎದುರಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿವೆ. ಗ್ರಾಮೀಣ ಪ್ರದೇಶದ ಜನರಿಗೆ ಈ ಆಸ್ಪತ್ರೆಗಳು ಪ್ರಮುಖ ಆಸರೆಯಾಗಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆಯ ಪ್ರಮಾಣ ಕಡಿಮೆಯಾಗಿರುವುದನ್ನು ಇಲಾಖೆ ಗಮನಿಸಿದೆ.
ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಸಮುದಾಯ ಆರೋಗ್ಯ ಕೇಂದ್ರಗಳಿಂದ ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು (ಅನಸ್ತೇಶಿಯಾ), ಮಕ್ಕಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಬಂದಿದೆ. ಈ ಸಂಬಂಧ ಎಲ್ಲ ಆಸ್ಪತ್ರೆಗಳ ಮಾಸಿಕ ಹೆರಿಗೆ ವರದಿಯನ್ನು ಈಗಾಗಲೇ ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ.
ಇದರಿಂದ ಮುಂದಿನ ದಿನಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ವೈದ್ಯರು, ಹೆರಿಗೆ ವೈದ್ಯರು ಮತ್ತು ಅನಸ್ತೇಶಿಯಾ ತಜ್ಞರ ಲಭ್ಯತೆ ಅನುಮಾನವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ.
ಆರೋಗ್ಯ ಇಲಾಖೆ ಈಗಾಗಲೇ ಕಡಿಮೆ ಹೆರಿಗೆಯಾಗುವ ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿದ್ದು, ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ರೇಡಿಯಾಲಜಿಸ್ಟ್ಗಳು ಹಾಗೂ ಜನರಲ್ ಮೆಡಿಸಿನ್ ವೈದ್ಯರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಕಡಿಮೆ ಕಾರ್ಯಕ್ಷಮತೆಯ ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ಸೇವೆ ಒಗ್ಗೂಡಿಸುವ ಯೋಜನೆ ರೂಪಿಸಲಾಗಿದೆ.
ಈ ಕ್ರಮದಿಂದ ತಾಲೂಕು ಆಸ್ಪತ್ರೆಗಳಲ್ಲಿ ಸೇವೆ ಬಲಪಡಿಸುವ ಉದ್ದೇಶ ಇದ್ದರೂ, ಗ್ರಾಮೀಣ ಭಾಗದ ಜನರಿಗೆ ಸಮೀಪದ ಆರೋಗ್ಯ ಸೇವೆ ಕಡಿಮೆಯಾಗುವ ಭೀತಿ ಎದುರಾಗಿದೆ.



