ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ಪದೇಪದೇ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿರುವುದಕ್ಕೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸುವ ಸಂದರ್ಭದಲ್ಲಿ ತಮಿಳುನಾಡು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಹಿರಿಯ ವಕೀಲರು ಲಭ್ಯವಿಲ್ಲದ ಕಾರಣ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದು ತಮಿಳುನಾಡು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು.
ಇದೇ ಕಾರಣ ನೀಡಿ ಹಿಂದಿನ ವಿಚಾರಣೆಯ ಸಂದರ್ಭದಲ್ಲಿಯೂ ಮುಂದೂಡಿಕೆ ಕೋರಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ಮನವಿ ಸಲ್ಲಿಸಿರುವುದಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು. ಇಂತಹ ಪದೇಪದೇ ಮುಂದೂಡಿಕೆ ಮನವಿಗಳು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ಅಭಿಪ್ರಾಯಪಟ್ಟಿತು.
ತಮಿಳುನಾಡು ಸರ್ಕಾರದ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.
ಎರಡನೇ ಬಾರಿಗೆ ಹಿನ್ನಡೆ
ಸುಪ್ರೀಂ ಕೋರ್ಟ್ನ ಇತ್ತೀಚಿನ ನಿರ್ಧಾರದಿಂದ ತಮಿಳುನಾಡು ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಕಳೆದ ವಾರವೂ ಬಾಕಿ ಇರುವ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿತ್ತು. ಕರ್ನಾಟಕದಿಂದ ಹೆಚ್ಚುವರಿಯಾಗಿ ಬಾಕಿ ಇರುವ 11 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.







