ಚಿಕ್ಕಬಳ್ಳಾಪುರ: ಕುಂಟೆಯಲ್ಲಿ ಮುಳುಗಿ ತಾಯಿ ಹಾಗೂ ಮಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೆಂಗಳೂರಿನ ಬನಶಂಕರಿ ನಿವಾಸಿಗಳಾದ ಸಲ್ಮಾ (37) ಹಾಗೂ ಅವರ ಪುತ್ರಿ ಸಾದಿಕಾ (14) ಮೃತಪಟ್ಟ ದುರ್ದೈವಿಗಳು. ಮೂಲತಃ ನಿಮ್ಮಕಾಯಲಹಳ್ಳಿ ಗ್ರಾಮದವರಾದ ಸಲ್ಮಾ ಅವರು ಮಗಳೊಂದಿಗೆ ತಮ್ಮ ತವರು ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ಕುಂಟೆಯ ಬಳಿ ವಿಹಾರಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕುಂಟೆಯ ಸಮೀಪವಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಾದಿಕಾ ನೀರಿಗೆ ಬಿದ್ದಿದ್ದಾಳೆ. ಮಗಳನ್ನು ರಕ್ಷಿಸುವ ಉದ್ದೇಶದಿಂದ ತಾಯಿ ಸಲ್ಮಾ ಕೂಡಲೇ ನೀರಿಗೆ ಇಳಿದಿದ್ದಾರೆ. ಆದರೆ ಕುಂಟೆಯ ಆಳದ ಅರಿವಿಲ್ಲದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ತಾಯಿ-ಮಗಳ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ.
ಬಟ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.










