ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಹನೂರು ತಾಲೂಕಿನ ನಕ್ಕುಂದಿ ಗ್ರಾಮದ ನಾಗೇಂದ್ರ (21) ಮತ್ತು ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ.
ನದಿಯಾ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಐಪಿಹೆಚ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಅವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಸ್ಥೆಯವರು ಪೋಷಕರಿಗೆ ಮಾಹಿತಿ ನೀಡಲು ಪ್ರಯತ್ನಿಸಿದರೂ, ಪಾಲಾರ್ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಮಾಹಿತಿ ತಲುಪಲು ವಿಳಂಬವಾಗಿದೆ.
ಇದೇ ವೇಳೆ, ಪೊನ್ನಾಚಿ ಗ್ರಾಮದಲ್ಲಿ ನಡೆಯುತ್ತಿದ್ದ ಕುಳ್ಳು ಮಾರಮ್ಮ ಜಾತ್ರೆಗೆಂದು ನಾಗೇಂದ್ರನನ್ನು ತಾತ ಶಿವ ಮಾದಯ್ಯ ಮನೆಗೆ ಕರೆದುಕೊಂಡು ಬಂದಿದ್ದರು. ತಡರಾತ್ರಿ ಇಬ್ಬರೂ ಒಂದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ನದಿಯಾ ಅವರ ತಂದೆ ಮಾದೇವ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಶವಗಳನ್ನು ವಶಕ್ಕೆ ಪಡೆದು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರೇಮಿಗಳ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.



