ಬೆಂಗಳೂರು: ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಯಲಿದ್ದು, ಇಂದಿನಿಂದ ಆರಂಭವಾಗಿ ಮುಂದಿನ ಏಳು ದಿನಗಳವರೆಗೆ (ಅ.22ರವರೆಗೆ) ರಾಜ್ಯದ ಹಲವೆಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕೆಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವಡೆಗಳಲ್ಲಿ ಹಗುರದಿಂದ ಹಿಡಿದು ಸಾಧಾರಣ ಮಟ್ಟದ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಸಿ.ಬಿ.ಪುರ, ಮಂಡ್ಯ, ತುಮಕೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



