ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.
ರಸ್ತೆಗಳ ಮೇಲೆ ನೀರು ನಿಂತ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಉತ್ತರಹಳ್ಳಿ, ಬನಶಂಕರಿ, ಸುಬ್ರಮಣ್ಯಪುರ, ಹೆಬ್ಬಾಳ, ತ್ಯಾಗರಾಜನಗರ, ಜಯನಗರ, ಪದ್ಮನಾಭನಗರ, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಸದಾಶಿವನಗರ, ವಿಜಯನಗರ, ಚಂದ್ರಾ ಲೇಔಟ್, ರಾಜಾಜಿನಗರ ಹಾಗೂ ಕೋರಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಕಳೆದ ಎರಡು ದಿನಗಳಲ್ಲೂ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಹಲವು ಅವಾಂತರಗಳು ಸಂಭವಿಸಿವೆ.
ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.



