ಬೆಂಗಳೂರು:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯ ಆರ್ಭಟ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಹಾಗೂ ಆಲಿಕಲ್ಲು ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದೇ ವೇಳೆ ಕರಾವಳಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಕಲಬುರಗಿ ಜಿಲ್ಲೆಗಳ ಕೆಲ ಭಾಗಗಳಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತೀವ್ರ ಹವಾಮಾನದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಜಲಾವೃತ, ವಾಹನ ಸಂಚಾರ ದಟ್ಟಣೆ ಹಾಗೂ ವಿದ್ಯುತ್ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ. ಬಲವಾದ ಗಾಳಿಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳುವ ಅಪಾಯವೂ ಇದೆ.
ಸಾರ್ವಜನಿಕರು ಮಳೆ ಮತ್ತು ಬಿರುಗಾಳಿಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ತೆರಳದಂತೆ, ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿರುವ ಕಟಾವು ಮಾಡಿದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ತಮ್ಮ ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವಂತೆ ಸೂಚಿಸಲಾಗಿದೆ.



