ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದಲ್ಲಿ ಗುಡುಗು-ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದ ಒಳನಾಡು ಹಾಗೂ ಕರಾವಳಿ ಭಾಗಗಳ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.



