ಬೆಂಗಳೂರು:- ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಏಳು ದಿನಗಳ ಕಾಲ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ, ಸಿಡಿಲು-ಗುಡುಗು ಸಹಿತ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದು, ಈ ಆರ್ಭಟ ಮುಂದಿನ ಒಂದು ವಾರವೂ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ.
ಏ.27ರವರೆಗೆ ಮಳೆ ಬರುವ ಮುನ್ಸೂಚನೆ ನೀಡಲಾಗಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ಒಂದೆರಡು ಸ್ಥಳಗಳಲ್ಲಿ ಬಲವಾದ ಮೇಲ್ಮೈ ಸುಳಿಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏ.24 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ.
ಏ.25 ರಂದು ಉಡುಪಿ, ದಕ್ಷಿಣ ಕನ್ನಡದ ಎರಡು ಸ್ಥಳಗಳಲ್ಲಿ, ಉತ್ತರ ಕರ್ನಾಟಕದ ಒಳನಾಡಿನ ಎರಡು ಸ್ಥಳಗಳಲ್ಲಿ, ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಏ.26ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಎರಡು ಸ್ಥಳಗಳಲ್ಲಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.