ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ ಕಳಸ ತಾಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ತಾಲೂಕು ಆಡಳಿತಗಳು ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿವೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಅವತಿ, ವಸ್ತಾರೆ ಹಾಗೂ ಆಲ್ದೂರು ವ್ಯಾಪ್ತಿಯ ಶಾಲೆಗಳಿಗೂ ರಜೆ ನೀಡಲಾಗಿದೆ.
ಮಳೆಗಿಂತ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಗ್ರಾಮೀಣ ಭಾಗಗಳಲ್ಲಿ ಮರಗಳು ಬೀಳುವ ಹಾಗೂ ಇತರ ಅನಾಹುತಗಳ ಆತಂಕವಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲೂ ರಜೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.



