ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಕಂಗೆಟ್ಟ ಜನತೆಗೆ ಇದೀಗ ಮಳೆರಾಯನ ಆಗಮನವಾಗುವ ಸೂಚನೆ ಕಂಡುಬಂದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಉಷ್ಣ ಅಲೆಯ ಪ್ರಭಾವವಿದ್ದರೂ, ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 40–50 ಕಿ.ಮೀ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯೊಂದಿಗೆ ಬಲವಾದ ಗಾಳಿಯ ಸಾಧ್ಯತೆ ಇದೆ.
ಇದೇ ವೇಳೆ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 2–3 ದಿನಗಳ ಕಾಲ ರಾಜ್ಯದ ಹಲವೆಡೆ ಆಲಿಕಲ್ಲು ಹಾಗೂ ಗುಡುಗು ಮಳೆಯ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಇಲಾಖೆ ಸೂಚಿಸಿದೆ.



