ಬೆಂಗಳೂರು:– ಮುಂದಿನ ಎರಡು ದಿನ ಕರ್ನಾಟಕದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರು:
ಇನ್ನು, ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಲೆನಾಡು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ, ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಯಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ:
ಬೆಳಗಾವಿ ಜಿಲ್ಲೆಯ ಏಳು ತಾಲೂಕಿನಲ್ಲಿನ ಅಂಗನವಾಡಿ ಕೇಂದ್ರ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲೂಕಿನಲ್ಲಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಧಾರವಾಡ:-
ಧಾರವಾಡ ಜಿಲ್ಲೆಯಲ್ಲಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಈ ರಜೆಯನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಲು ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ:
ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಹಾಸನ:-
ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೂಡು, ಬೇಲೂರು, ಆಲೂರು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ರಜೆ ಘೋಷಿಸಿದ್ದಾರೆ.