ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಒಳನಾಡು ಹಾಗೂ ಕರಾವಳಿ ಭಾಗಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಜೋರಾದ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಾಗುವ ನಿರೀಕ್ಷೆಯಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಭಾರಿ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.



