ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಜುಲೈ 9ರಿಂದ ಜುಲೈ 12ರವರೆಗೆ ರಾಜಾಸೀಟ್ಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮಡಿಕೇರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ರಾಜಾಸೀಟ್ ರಸ್ತೆಯ ಮೂಲಕ ಪರ್ಯಾಯವಾಗಿ ತಿರುಗಿಸಲಾಗಿದೆ.
ಇದರಿಂದ ರಾಜಾಸೀಟ್ ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ಪ್ರವಾಸಿಗರು ರಾಜಾಸೀಟ್ ಬಳಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿ ಗಂಭೀರವಾಗುವ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ರಸ್ತೆಯಲ್ಲಿ ಶಾಲೆಯೂ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದಲೂ ಕ್ರಮ ಅಗತ್ಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ರಾಜಾಸೀಟ್ ಬಳಿ ವಾಹನ ನಿಲುಗಡೆ ಹಾಗೂ ಪ್ರವಾಸಿಗರ ಪ್ರವೇಶವನ್ನು ಜುಲೈ 12ರವರೆಗೆ ಸಂಪೂರ್ಣ ನಿಷೇಧಿಸಲಾಗಿದೆ.



