ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 9ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲೂ ಮಳೆ:
ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ 9ರಂದು ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ತುಸು ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಕರಾವಳಿಯಲ್ಲಿ ಭಾರಿ ಮಳೆ ದಾಖಲು:
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 7 ಸೆಂ.ಮೀ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.



