ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ ಬಂಗಾಳ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಬಾನು ಖಾತುನ್ ಹುಲಿಮಂಗಲದ ಪೋಡು ಪ್ರದೇಶ ಸಮೀಪದ ಶೆಡ್‌ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಪೊಲೀಸರ ಮಾಹಿತಿಯಂತೆ, ಮೂರು ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸಿ ಶೆಡ್‌ಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮವಾಗಿ ವಾಸವಾಗಿದ್ದಾರೆನ್ನಲಾದ ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶೆಡ್‌ಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ಸಮೀಪದಲ್ಲೇ ವಾಸವಾಗಿದ್ದ ಸರ್ಬಾನು ಖಾತುನ್ ರಸ್ತೆ ಮೂಲಕ ನಡೆದುಕೊಂಡು ಬರುತ್ತಿದ್ದಾಗ ಘಟನೆ ನಡೆದಿದೆ.
ಆ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಮಹಿಳೆ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆನ್ನಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಹೆಬ್ಬಗೋಡಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಪ್ರಾಥಮಿಕ ವಿಚಾರಣೆ ನಂತರ ದಾಖಲೆಗಳ ಪರಿಶೀಲನೆಗಾಗಿ ಮಹಿಳೆಯನ್ನು ಎಫ್‌ಆರ್‌ಆರ್‌ಒ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫೀಸ್) ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಕುರಿತು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.



